ಒಂದರಿಂದ ಎಂಟನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಈ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಡಿ ಒಂದರಿಂದ ಎಂಟನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ಲಭ್ಯವಿರುವ ಕಾರಣ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದ್ದು, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸಿಗಲಿದೆ.
ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಈಗ ಪ್ರತಿಪಕ್ಷಗಳ ನಾಯಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಬಡ ವಿದ್ಯಾರ್ಥಿಗಳ ಹಣ ಕಸಿದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಲಾಭ ಮಾಡಿಕೊಳ್ಳುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.