ಅಹ್ಮದ್‌ನಗರ: ಸಿವಿಲ್ ಆಸ್ಪತ್ರೆಯ ಕೋವಿಡ್-19 ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ಮಂದಿ ರೋಗಿಗಳು ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ, ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಸಂಭವಿಸಿದೆ.
ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು. ಹತ್ತು ರೋಗಿಗಳು ಸಾವನ್ನಪ್ಪಿದ್ದಾರೆ. ಮತ್ತೋರ್ವ ರೋಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಯ ಕೋವಿಡ್-19 ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಲ್ಲಿ 17 ರೋಗಿಗಳು ದಾಖಲಾಗಿದ್ದರು.
ಇನ್ನುಳಿದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಯ ಕೋವಿಡ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದುರಂತ ಸಂಭವಿಸಿದೆ ಎನ್ನಲಾಗಿದೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ದುರಂತದ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇನ್ನು ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪ್ರಾಣಹಾನಿಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಧಾನಿ ಹಾರೈಸಿ, ಟ್ವೀಟ್ ಮಾಡಿದ್ದಾರೆ.