ಕುಶಿನಗರ: ಉತ್ತರ ಪ್ರದೇಶದ ಯುಪಿಯ ಕುಶಿನಗರದಲ್ಲಿ ಮದುವೆ ಸಮಾರಂಭದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು 11 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪ್ರದೇಶದಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ಘಟನೆ ನಡೆದಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಶಿನಗರದ ಜಿಲ್ಲಾಧಿಕಾರಿ ಎಸ್.ರಾಜಲಿಂಗಂ, ಅಕಸ್ಮಾತ್ ಬಾವಿಗೆ ಬಿದ್ದು 11 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮದುವೆ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಜನರು ಬಾವಿಯ ಚಪ್ಪಡಿಯ ಮೇಲೆ ಕುಳಿತಿದ್ದರು. ಹೆಚ್ಚಿನ ಭಾರದಿಂದಾಗಿ ಚಪ್ಪಡಿ ಮುರಿದುಹೋಯಿತು. ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕುಶಿನಗರದ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾವಿಗೆ ಬಿದ್ದು ಸಾವನ್ನಪ್ಪಿದ ಜನರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.