
ಕಲಬುರಗಿ : ರಾಜ್ಯದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ನೇಮಕ ಪರೀಕ್ಷೆಯಲ್ಲಿ ಅಕ್ರಮ ಮಾಡಿದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ 13 ಹಾಗೂ ಯಾದಗಿರಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಮಾಡಿದ ಆರೋಪದ ಮೇಲೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಟ್ಟು 16 ಜನರನ್ನು ಪೊಲೀಸರು ಬಂಧಿಸಿದ್ದು, ಈ ಪಯಕಿ ಆರು ಮಂದಿ ಅಭ್ಯರ್ಥಿಗಳು ಮತ್ತು ಅವರಿಗೆ ಸಹಾಯ ಮಾಡುತ್ತಿದ್ದ 10 ಜನರು ಇದ್ದಾರೆ.
ಶನಿವಾರ ಕಲಬುರಗಿಯ ಶರಣಬಸವೇಶ್ವರ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ತ್ರಿಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿವಿ ಕ್ಯಾಂಪಸ್ ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಯಾದಗಿರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಮಾಡುತ್ತಿದ್ದ ಅಭ್ಯರ್ಥಿಯನ್ನು ಹಾಗೂ ಸಹಾಯ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.