ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದು, ಒಂದೊಮ್ಮೆ ಇದು ನಿಜವಾದರೆ ಕರ್ನಾಟಕ ವಿಧಾನಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದ ಮೇಲೆ ಇದು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಹೈಕಮಾಂಡ್ 38 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿತ್ತು. ಹೀಗಾಗಿ ಕೆಲವೊಂದು ಕ್ಷೇತ್ರಗಳಲ್ಲಿ ಟಿಕೆಟ್ ಸಿಗದ ಹಾಲಿ ಶಾಸಕರು ಬಂಡಾಯ ಅಭ್ಯರ್ಥಿಗಳಾಗಿ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಅಭ್ಯರ್ಥಿಗಳಿಗೇ ಮತದಾರ ಮನ್ನಣೆ ನೀಡಿದ್ದಾರೆ ಎಂಬುದನ್ನು ಹೇಳುತ್ತಿದೆ.
ಹೀಗಾಗಿ ಇನ್ನು ಐದಾರು ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದೆ ನೀತಿಯನ್ನು ಅಳವಡಿಸಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಕರ್ನಾಟಕದ ಬಹಳಷ್ಟು ಹಾಲಿ ಬಿಜೆಪಿ ಶಾಸಕರುಗಳಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಇದಕ್ಕೊಂದು ಸ್ಪಷ್ಟತೆ ಸಿಗಲಿದೆ.