ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದ ಹಲವು ಕಡೆ ಭಾರಿ ಮಳೆ ಸುರಿದಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆ ಅವಾಂತರದಿಂದ 20 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರ ನೋವು ಹೇಳತೀರದಾಗಿದ್ದು, ನಾನು ಸ್ಥಳಕ್ಕೆ ಭೇಟಿ ನೀಡಿ ಮೃತರ ಸಂಬಂಧಿಕರಿಗೆ ನನ್ನಿಂದಾದಷ್ಟು ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಅಲ್ಲದೆ, ಸರ್ಕಾರದಿಂದ ಸಾಧ್ಯವಾದ ಎಲ್ಲಾ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ರಾಜ್ಯದ ಹಲವು ಕಡೆ ಭಾರಿ ಮಳೆ
ರಾಜ್ಯದ ಹಲವು ಕಡೆ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಇನ್ನೂ ಮೂರು ದಿನ ಕರಾವಳಿಯಲ್ಲಿ ನೈರುತ್ಯ ಮುಂಗಾರು ಆರ್ಭಟದ ಬಗ್ಗೆ ಮುನ್ಸೂಚನೆ ನೀಡಿದೆ. ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 2 ರಿಂದ 4ರ ವರೆಗೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಜುಲೈ 2 ರಿಂದ 4ರವರೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮೊದಲ ದಿನ ಮತ್ತು ಮೂರನೇ ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.