ಲಖ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 3 ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.
ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 40ರಷ್ಟು ಟಿಕೆಟ್ ನೀಡಲಾಗುವುದು ಎಂದು ಈಗಾಗಲೇ ಘೋಷಿಸಿರುವ ಪ್ರಿಯಾಂಕ ಗಾಂಧಿ, ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದಾರೆ. ಸರ್ಕಾರಿ ನೇಮಕಾತಿಯಲ್ಲಿ ಪ್ರತಿ 5 ಹುದ್ದೆಯಲ್ಲಿ ಹೆಣ್ಣುಮಕ್ಕಳಿಗೆ ಎರಡು ಹುದ್ದೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯೋಗಕ್ಕೆ ಆದ್ಯತೆ ನೀಡಲಾಗುತ್ತದೆ. ಮಹಿಳೆಯರಿಗೆ ವಾರ್ಷಿಕ 3 ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಬಸ್ ಗಳಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನವನ್ನು 10,000 ರೂ.ಗೆ ಹೆಚ್ಚಳ ಮಾಡಲಾಗುವುದು. ವಿಧವಾ ವೇತನ ಏರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.