ಬೆಂಗಳೂರು: ವಿಧಾನಸಭೆಯಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಬಜೆಟ್ ಮೇಲಿನ ಚರ್ಚೆ ಮುಂದುವರೆಸಿದಾಗ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ಸದಸ್ಯರ ನಡುವೆ ಗದ್ದಲ ನಡೆದ ಪಸಂಗ ನಡೆಯಿತು.
ಬಜೆಟ್ ಮೇಲಿನ ಚರ್ಚೆ ವೇಳೆ ಶಾಸಕ ವೇದವ್ಯಾಸ್ ಕಾಮತ್ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ ಹೋಗಿದ್ದಾರೆ. ಇದಕ್ಕೆ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಸದಸ್ಯರು ಕಾಂಗ್ರೆಸ್ ಸದಸ್ಯರ ವಿರುದ್ಧ ಮುಗಿಬಿದ್ದರು.
ಈ ವೇಳೆ ಮಧ್ಯಪ್ರವೇಶ ಮಾಡಿದ ಸ್ಪೀಕರ್ ಯು.ಟಿ.ಖಾದರ್, ಬೇಗನೇ ಚರ್ಚೆ ಮುಗಿಸಿ ಎಂದು ವೇದವ್ಯಾಸ್ ಕಾಮತ್ ಅವರಿಗೆ ಸೂಚಿಸಿದರು. ಇದಕ್ಕೆ ಗರಂ ಆದ ಶಾಸಕರು, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿಗೆ ಹೆಚ್ಚು ಸಮಯ ಕೊಟ್ಟಿದ್ದೀರಿ. ನನಗೂ ಕೊಡಿ ಎಂದು ಹೇಳಿದರು.
ನಾರಾಯಣಸ್ವಾಮಿ 3ನೇ ಬಾರಿ ಶಾಸಕರಾಗಿ ಬಂದಿದ್ದಾರೆ ಎಂದು ಸ್ಪೀಕರ್ ಹೇಳುತ್ತಿದ್ದಂತೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ್ ಕಾಮತ್, 2028ಕ್ಕೂ ನಾನೇ ಗೆದ್ದು ಬರುತ್ತೇನೆ ಎಂದು ಟಾಂಗ್ ನೀಡಿದರು.