ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.
ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ನಾವೇ ಖುದ್ದಾಗಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದೇವೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾದರು ಕೆಲ ಜಿಲ್ಲೆಗಳಲ್ಲಿ ಮಳೆ ಕೊರೆತೆಯಿದೆ. ಜುಲೈ ಕೊನೆವಾರದವರೆಗೆ ನೋಡಿಕೊಂಡು ಮೋಡ ಬಿತ್ತನೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.
ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆ
ಇಂದು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ನಾಳೆಯಿಂದ ಮಳೆ ಅಬ್ಬರ ಕಡಿಮೆಯಾಗಲಿದೆ. ಮತ್ತೆ ಜು.13 ರಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.