ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಹರೀಶ್ ಪೂಂಜಾ, ಮತದಾರರಿಗೆ ಅಭಿನಂದನೆ ಸಲ್ಲಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಅವರು ಹೇಳಿದ್ದು, ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ತಮ್ಮ ವಿರುದ್ಧ ಪ್ರಚಾರ ನಡೆಸಿದ್ದಾರೆ ಎಂದು ಹಿಂದೂ ಪರ ನಾಯಕ ಸತ್ಯಜಿತ್ ಸುರತ್ಕಲ್ ವಿರುದ್ಧ ವಾಗ್ದಾಳಿ ನಡೆಸಿದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟು ಕೇಳಿದ್ದೀರಿ. ಬಜರಂಗದಳವನ್ನು ಬ್ಯಾನ್ ಮಾಡಲು ಹೊರಟವರ ಪರ ನೀವು ನಿಂತಿದ್ದೀರಿ ಎಂದು ಆರೋಪಿಸಿದ್ದಾರೆ.
ಇದೀಗ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದು, ಅತ್ತ ತಮ್ಮ ವಿರುದ್ಧ ಆರೋಪ ಮಾಡಿರುವ ಹರೀಶ್ ಪೂಂಜಾಗೆ ಹಿಂದೂ ನಾಯಕರಾದ ಸತ್ಯಜಿತ್ ಸುರತ್ಕಲ್, ಪ್ರವೀಣ್ ವಾಲ್ಕೆ ತಿರುಗಿ ಬಿದ್ದಿದ್ದಾರೆ. ನಿಮ್ಮಿಂದ ಹಿಂದುತ್ವದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ಈ ಕುರಿತ ಬಹಿರಂಗ ಚರ್ಚೆಗೆ ನಾವು ಸಿದ್ದ ಎಂದು ಉಭಯ ನಾಯಕರು ಹೇಳಿದ್ದಾರೆ.