ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜೆಎಸ್ಡಬ್ಲೂನ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಎಜುಕಾನ್-2024’ ಎರಡು ದಿನಗಳ ಶೈಕ್ಷಣಿಕ ಸಮಾವೇಶದ ಎರಡನೇ ದಿನದ ಕಾರ್ಯಕ್ರಮ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಈಗಾಗಲೇ 42,500 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಕಕ ವ್ಯಾಪ್ತಿಯಲ್ಲಿ 11,600 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.
ಕಕ ಭಾಗದಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದು, ವಿಷಾಧನೀಯ ಸಂಗತಿಯಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಬರುವಿಕೆಗಾಗಿ ಕಾಯುತ್ತಿದ್ದಾರೆ. ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡಲು ಪೋಷಕರು ತಪ್ಪದೇ ಶಾಲೆಗಳಿಗೆ ಕಳುಹಿಸಬೇಕು ಎಂದು ಕರೆ ನೀಡಿದ ಅವರು, ಇದರ ಜವಾಬ್ದಾರಿಯನ್ನು ಎಸ್ಡಿಎಂಸಿಯವರು ವಹಿಸಬೇಕು ಎಂದು ಹೇಳಿದರು.