ಕರ್ನಾಟಕ ವಿಧಾನಸಭಾ ಚುನಾವಣೆಗೆ ಗುಜರಾತ್ ಮಾದರಿಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಟಿಕೆಟ್ ವಂಚಿತರಾದ ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಎಂ.ಪಿ. ಕುಮಾರಸ್ವಾಮಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಅನಿಲ ಬೆನಕೆ ಸೇರಿದಂತೆ ಇನ್ನೂ ಕೆಲ ಶಾಸಕರು ಇದೇ ಹಾದಿ ಹಿಡಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರ ಮಧ್ಯೆ ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗದ ಕಾರಣ ಆಕ್ರೋಶಗೊಂಡಿರುವ ಜಗದೀಶ್ ಶೆಟ್ಟರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಹದಿನಾರು ಸದಸ್ಯರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.
ಒಂದೊಮ್ಮೆ ಟಿಕೆಟ್ ಸಿಗದಿದ್ದರೆ ಜಗದೀಶ್ ಶೆಟ್ಟರ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಹೀಗಾಗಿ ಮೂರನೇ ಪಟ್ಟಿಯಲ್ಲಿ ಅವರಿಗೆ ಟಿಕೆಟ್ ಘೋಷಣೆಯಾಗುವ ನಿರೀಕ್ಷೆ ಇದೆ. ಅಲ್ಲದೆ ಲಿಂಗಾಯತ ಸಮುದಾಯವನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಭಾವನೆ ಮೂಡಿದರೆ ಇದು ಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೂ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಕುರಿತು ಚಿಂತನೆ ನಡೆಸಲಾಗಿದೆ.