ಈ ಬಾರಿಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, 135 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದ್ದು, ಹೀಗಾಗಿ ಇತರೆ ಶಾಸಕರ ಹಂಗಿಲ್ಲದೆ ಅಧಿಕಾರದ ಗದ್ದುಗೆ ಏರಲಿದೆ.
ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನಾಯಕನ ಆಯ್ಕೆ ನಡೆಯಲಿದೆ. ಬಹುತೇಕ ನಾಳೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ರೇಸ್ ನಲ್ಲಿದ್ದು ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇದರ ಮಧ್ಯೆ 34 ವರ್ಷಗಳ ಬಳಿಕ ಇದೆ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ದೊಡ್ಡ ಅಂತರದಲ್ಲಿ ಜಯ ಸಾಧಿಸಿದೆ. 1989 ರಲ್ಲಿ ವೀರೇಂದ್ರ ಪಾಟೀಲ್ ನಾಯಕತ್ವದಲ್ಲಿ 178 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್, ಈ ಬಾರಿ 135 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.