ಬೆಂಗಳೂರು : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು, ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.
ರಾಜ್ಯದ ಹವಮಾನ, ಮಳೆ-ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜೊತೆ ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು.
ವ್ಯಾಪಕ ಮಳೆಯಿಂದ ಉಂಟಾಗಬಹುದಾದ ಅನಾಹುತ ತಡೆಯಲು ಜಿಲ್ಲಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹಾಗೆಯೇ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು ಎಂದು ನಿರ್ದೇಶನ ನೀಡಿದರು.
21 ಜಿಲ್ಲೆಗಳಲ್ಲಿ ವಾಡಿಕೆ ಮಳೆ ಆಗಿದೆ. ಆರು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜೂನ್ 1ರಿಂದ ಇದುವರೆಗೆ 38 ಜನ ಸಾವನ್ನಪ್ಪಿದ್ದು, 35 ಜನ ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಮಳೆಯಿಂದ 57 ಮನೆ ಸಂಪೂರ್ಣವಾಗಿ ಹಾನಿಯಾಗಿವೆ, 2682 ಮನೆಗಳು ಭಾಗಶಃ ಹಾನಿಯಾಗಿದ್ದು, 105 ಜಾನುವಾರು ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.
541 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 185 ಹೆಕ್ಟರ್ ಪ್ರದೇಶದಲ್ಲಿ ಕೃಷಿ ಬೆಳೆ, 356 ಹೆಕ್ಟರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಮಳೆಯಿಂದ 417 ಕಿಮೀ ರಾಜ್ಯ ಹೆದ್ದಾರಿ, 425 ಕಿಮೀ ಜಿಲ್ಲಾ ಹೆದ್ದಾರಿ, 1277 ಕಿಮೀ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. 189 ಸೇತುವೆ, 889 ಶಾಲಾ ಕೊಠಡಿ, 8 ಪ್ರಾಥಮಿಕ ಕೇಂದ್ರ, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿರುವುದು ವರದಿಯಾಗಿದೆ. 11,995 ವಿದ್ಯುತ್ ಕಂಬ, 894 ಟ್ರಾನ್ಸ್ ಫಾರ್ಮರ್, 215 ಕಿಮೀ ಉದ್ದದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಸಂಬಂಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ ಗಳ ದೂರವಾಣಿ ಸಂಖ್ಯೆ ಜನರಿಗೆ ದೊರೆಯುವಂತಿರಬೇಕು ಎಂದು ಸೂಚಿಸಿದರು.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜುಲೈ 29 ರ ವರೆಗೆ ಮಳೆ ಇರಲ್ಲಿದೆ. ಆ ನಂತರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಒಟ್ಟು 540 ಕೊಟಿ ರೂ ಇದ್ದು, ಅಗತ್ಯ ಇರುವ ಕಡೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದರು.