ನವದೆಹಲಿ: ಬರೋಬ್ಬರಿ 18 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಇಂಟರ್ನೆಟ್ ಸೇವೆಯನ್ನು ಪುನಾರಂಭಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ ಶುಕ್ರವಾರ ಇಂಟರ್ನೆಟ್ ಸೇವೆಯನ್ನು ಪುನಾರಂಭಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಕಳೆದ ವರ್ಷ ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿತ್ತು. ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ವಿಭಜನೆಗೊಂಡಿದ್ದು ಇದಕ್ಕಿಂತ ಕೆಲವು ಗಂಟೆಗಳ ಮೊದಲೇ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.
ಮೊಬೈಲ್ ಫೋನ್ ಗಳಲ್ಲಿ 2ಜಿ ಇಂಟರ್ನೆಟ್ ಸೌಲಭ್ಯವನ್ನು ಜನವರಿ 25 ರಂದು ಆರಂಭಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಕೆಲವು ಪ್ರದೇಶಗಳಲ್ಲಿ 4ಜಿ ಸೇವೆ ಮರು ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲು ಸುಪ್ರೀಂಕೋರ್ಟ್ ತಿಳಿಸಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಮೊಬೈಲ್ ಇಂಟರ್ನೆಟ್ ಪುನಃ ಸ್ಥಾಪನೆಯಾಗಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದರಿಂದ ವಿದ್ಯಾರ್ಥಿಗಳು, ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಶ್ರೀನಗರ ಮೇಯರ್ ಕನ್ವಾಲ್ ಟ್ವೀಟ್ ಮಾಡಿದ್ದಾರೆ.
4 ಜಿ ಮುಬಾರಕ್..! ಆಗಸ್ಟ್ 2019 ರ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಕಡೆ 4ಜಿ ಮೊಬೈಲ್ ಇಂಟರ್ ನೆಟ್ ಸಿಗ್ತಿದೆ ಎಂದು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.