ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾಹಿತಿ ನೀಡಿದ ಅವರು, 20,000ಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.