ಫಿರೋಜಾಬಾದ್: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡದಲ್ಲಿ ಅಗ್ನಿ ದುರಂತ ಉಂಟಾಗಿದ್ದು, ನಾಲ್ವರು ಮಕ್ಕಳು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಕಟ್ಟಡದ ನೆಲ ಮಹಡಿಯಲ್ಲಿರುವ ಎಲೆಕ್ಟ್ರಾನಿಕ್ಸ್-ಕಮ್-ಫರ್ನಿಚರ್ ಅಂಗಡಿಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡು ಒಂದು ಕುಟುಂಬದ ಕನಿಷ್ಠ ಆರು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದ್ದು, ಅಂಗಡಿ ಮಾತ್ರವಲ್ಲದೆ ಮೊದಲ ಮಹಡಿಯಲ್ಲಿರುವ ಮಾಲೀಕರ ಮನೆಯೂ ಸುಟ್ಟುಹೋಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಾಣಹಾನಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಆಗ್ರಾ, ಮೈನ್‌ಪುರಿ, ಇಟಾಹ್ ಮತ್ತು ಫಿರೋಜಾಬಾದ್‌ನಿಂದ 18 ಅಗ್ನಿಶಾಮಕ ದಳದ ವಾಹನಗಳು ಮತ್ತು 12 ಪೊಲೀಸ್ ಠಾಣೆಗಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.