ಬೆಂಗಳೂರು : ರಾಜ್ಯದಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಸಮಸ್ಯೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿ ಮತ್ತು ಸಹಾಯವಾಣಿ ಸ್ಥಾಪಿಸಿ ದೂರು ಬಂದ ಕೂಡಲೇ ನೀರು ಪೂರೈಸುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ(ಮಾ.5) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಕುಡಿಯುವ ನೀರಿನ ತೊಂದರೆಯಾಗಬಾರದು. ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಗೆ ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಲಿದೆ.
ಕುಡಿಯುವ ನೀರು ಸಮಸ್ಯೆ ಕಂಡುಬಂದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಆರಂಭಿಸಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೇ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು. ತಾಲ್ಲೂಕುಮಟ್ಟದ ಟಾಸ್ಕ್ ಫೋರ್ಸ್ ಗಳು ನಿಯಮಿತವಾಗಿ ಸಭೆ ನಡೆಸುವ ಮೂಲಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಧರಿಸಬೇಕು ಎಂದು ಹೇಳಿದರು.
ಮೇವಿನ ಕಿಟ್ ಗಳನ್ನು ರೈತರಿಗೆ ನೀಡಲಾಗಿದೆ. ರೈತರಯ ಬೆಳೆದ ಮೇವು ಶೇಖರಣೆಗೆ ಕ್ರಮ ವಹಿಸಬೇಕು. ಇದಲ್ಲದೇ ಅಂತರ್ ಜಿಲ್ಲಾ ಮೇವು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು. ಬರ ನಿರ್ವಹಣೆಗೆ ಸರಕಾರ ಅನೇಕ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡಿದೆ. ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಈ ಬಾರಿ ಬರಗಾಲದ ತೀವ್ರತೆಯಲ್ಲಿಯೂ ಜನರಿಗೆ ಅನುಕೂಲವಾಗಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ 855 ಕೋಟಿ ರೂಪಾಯಿ ಅನುದಾನವಿದೆ. ಹೆಚ್ಚುವರಿಯಾಗಿ ಪ್ರತಿ ಜಿಲ್ಲೆಗೆ ಎರಡು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದರು.