ಶಿವಮೊಗ್ಗ : ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ ನುಡಿದರು.
ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಿಮಾನಯಾನ ಕಾರ್ಯಾಚರಣೆ ಮತ್ತು ಅಧಿಕೃತ ಜಾಲತಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ರಸಋಷಿ ಕುವೆಂಪು ಅವರ ಹೆಸರನ್ನು ಹೊರಲಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಆಗಲಿದೆ ಎಂದರು.
ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ ₹500 ರುಪಾಯಿ ರಾಜ್ಯ ಸರ್ಕಾರ ಸಬ್ಸಿಡಿ ನೀಡಲಿದೆ ಎಂದು ಸಚಿವರು ಘೋಷಿಸಿದರು.779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್ಬಸ್-320 ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗುತ್ತಿದೆ.
ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು. ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು ಎಂದ ಅವರು ರಾಜ್ಯ ಸರ್ಕಾರದಿಂದಲೇ ವಿಮಾನ ನಿಲ್ದಾಣ ನಿರ್ವಹಣೆ ಮಾಡುವ ಯೋಜನೆಯಿದ್ದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಥಮವಾಗಿ ನಿರ್ವಹಣೆ ಆರಂಭವಾಗಲಿದೆ. ಇದರಿಂದ ಸರ್ಕಾರಕ್ಕೆ ಆದಾಯ ಮತ್ತು ಆಸ್ತಿ ಉಳಿಯಲಿದೆ. ಈ ಕುರಿತು ಸಾಧಕ-ಬಾಧಕಗಳನ್ನು ತಿಳಿದು ಮುನ್ನಡೆಯುತ್ತೇವೆ ಎಂದರು.
ರಸ್ತೆ-ರೈಲ್ವೆ-ಏರ್ವೇ ಇಂದ ಆರ್ಥಿಕ, ಔದ್ಯೋಗಿಕ ಬೆಳವಣಿಗೆ ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ರೈತರ ಸಹಕಾರದೊಂದಿಗೆ ಕೈಗಾರಿಕೆಗಳನ್ನು ತರುವ ಉದ್ದೇಶ ಇದೆ ಎಂದರು.
ಜೊತೆಗೆ, ಯೋಜನೆಯ ಕನಸು ಕಂಡು, ಅದರ ಅನುμÁ್ಠನಕ್ಕೆ ಶ್ರಮಿಸಿದ ಯಡಿಯೂರಪ್ಪ ಮತ್ತು ಉಳಿದವರ ಪ್ರಯತ್ನಗಳನ್ನು ಉಲ್ಲೇಖಿಸಿದರು.