
ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರು ನೇಮಕಗೊಂಡ ಮೊದಲ ಮಹಿಳೆಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ ನಡೆದ ಆಪ್ ಶಾಸಕಾಂಗ ಪಕ್ಷದ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೆಹಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಒಂದು ದಿನದ ಮೊದಲು ಈ ಘೋಷಣೆ ಮಾಡಲಾಗಿದೆ.
ಆಪ್ ನಾಯಕ ಗೋಪಾಲ್ ರೈ, ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸವಾಲಿನ ಸಮಯದಲ್ಲಿ ಅತಿಶಿ ದೆಹಲಿಯ ಜನರಿಗೆ ಸಿಎಂ ಆಗಿ ಸೇವೆ ಸಲ್ಲಿಸಿದ್ದಾರೆ. ಎಎಪಿ ರಚನಾತ್ಮಕ ವಿರೋಧ ಪಕ್ಷದ ಜವಾಬ್ದಾರಿಯನ್ನು ಪೂರೈಸುತ್ತದೆ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷದ ಸದಸ್ಯರಿಗೆ ಅತಿಶಿ ಧನ್ಯವಾದ ಅರ್ಪಿಸಿದ್ದಾರೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು. ವಿಪಕ್ಷವಾಗಿ ಜನರ ಪರ ಧ್ವನಿಯನ್ನು ಎತ್ತುತ್ತೇವೆ ಎಂದು ಅತಿಶಿ ಹೇಳಿದ್ದಾರೆ.
70 ವಿಧಾನಸಭಾ ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ 26 ವರ್ಷಗಳ ನಂತರ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿತು, ಆದರೆ ಎಎಪಿ 22 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಯಿತು.