ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಈಗಿನ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಮೊತ್ತವನ್ನು 10 ಅಥವಾ 15 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದ್ದು, ಮುಂಬರುವ ಮಧ್ಯಂತರ ಬಜೆಟ್ ವೇಳೆ ಈ ಕುರಿತು ಘೋಷಣೆ ಹೊರಬೀಳುವ ನಿರೀಕ್ಷೆ ಇದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಯನ್ನು ಆಯುಷ್ಮಾನ್ ಭಾರತ್ ಯೋಜನೆ ಎಂದು ಕರೆಯಲಾಗುತ್ತಿದ್ದು, ಪ್ರಸ್ತುತ 6.14 ಕೋಟಿ ಜನರು ಈ ಯೋಜನೆಯಡಿ ಕಾರ್ಡ್ ಪಡೆದಿದ್ದಾರೆ. 2018 ರಲ್ಲಿ ಜಾರಿಗೆ ಬಂದ ಈ ಯೋಜನೆ ಮೂಲಕ 10 ಕೋಟಿ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ವಿಮಾ ರಕ್ಷಣೆ ಒದಗಿಸುವ ಉದ್ದೇಶವನ್ನು ಯೋಜನೆ ಹೊಂದಿತ್ತು.
ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಆರೋಗ್ಯ ವಿಮೆ ಮೊತ್ತವನ್ನು 5 ಲಕ್ಷ ರೂಪಾಯಿಗಳಿಂದ 10 ಅಥವಾ 15 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡುವುದರ ಜೊತೆಗೆ ಮತ್ತಷ್ಟು ಕುಟುಂಬಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಮೂಲಗಳು ಹೇಳಿವೆ.