ನವದೆಹಲಿ: ರಾಜ್ಯಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಎಐಸಿಸಿ ಘೋಷಣೆ ಮಾಡಿದೆ. ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ತೆಲಂಗಾಣ ರಾಜ್ಯದಿಂದ ಅವರು ಸ್ಪರ್ಧಿಸಲಿದ್ದಾರೆ.
ಈ ಹಿಂದೆ ಹಿಮಾಚಲ ಪ್ರದೇಶದಿಂದ ಸ್ಪರ್ಧಿಸಿದ್ದ ಸಿಂಘ್ವಿ ಸೋಲು ಕಂಡಿದ್ದರು. ಅವರಿಗೆ ಗೆಲ್ಲುವ ಅವಕಾಶವಿದ್ದರೂ ಅಡ್ಡ ಮತದಾನದ ಕಾರಣದಿಂದ ಸೋಲು ಕಂಡಿದ್ದರು.
ತೆಲಂಗಾಣದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಉಮೇದುವಾರಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಅನುಮೋದಿಸಿದ್ದಾರೆ.
ತೆಲಂಗಾಣದಲ್ಲಿ ನಡೆಯಲಿರುವ ರಾಜ್ಯಸಭಾ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ನಾಮನಿರ್ದೇಶನ ಮಾಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ಕೆ. ಕೇಶವ ರಾವ್ ಅವರಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಸೆ.3ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 14ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.