ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಸಿದ್ಧಪಡಿಸಿದ್ದ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ವರದಿಯನ್ನು ಸ್ವೀಕರಿಸಬೇಕೆಂಬ ಬೇಡಿಕೆ ಪ್ರಬಲವಾಗುತ್ತಿದ್ದು, ಇದರ ನಡುವೆಯೇ ಕಾಂತರಾಜ ವರದಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ಜಾತಿ ಗಣತಿಗೆ ಒತ್ತಾಯಿಸಲಾಗಿದೆ.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಶಾಸಕರ ಸಭೆಯಲ್ಲಿ ಯಾವುದೇ ಕಾರಣಕ್ಕೂ ವರದಿ ಒಪ್ಪದಿರುವ ತೀರ್ಮಾನಕ್ಕೆ ಬರಲಾಗಿದೆ.
ಯಾವುದೇ ಕಾರಣಕ್ಕೂ ಸರ್ಕಾರ ಕಾಂತರಾಜ ಆಯೋಗದ ಅವೈಜ್ಞಾನಿಕ ವರದಿ ಜಾರಿ ಮಾಡಬಾರದು. ಹೊಸದಾಗಿ ಜಾತಿ ಗಣತಿ ನಡೆಸಬೇಕೆಂದು ಒಕ್ಕಲಿಗ ಸಮುದಾಯದ ಮಠಾಧೀಶರು ಮತ್ತು ವಿವಿಧ ರಾಜಕೀಯ ಮುಖಂಡರ ಸಮ್ಮುಖದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾತಿಗಣತಿ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಒತ್ತಾಯಿಸಲು ತೀರ್ಮಾನಿಸಲಾಗಿದೆ.