
ಶಿವಮೊಗ್ಗ: ಶಿವಮೊಗ್ಗ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ 13 ಜನ ಮೃತಪಟ್ಟಿದ್ದಾರೆ. ಸಚಿವ ಮಧು ಬಂಗಾರಪ್ಪ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸರ್ಕಾರದಿಂದ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆಯಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಇನ್ನು ಹೆಚ್ಚಿನ ಸಹಾಯ ಮಾಡಲು ಮನವಿ ಮಾಡುವುದಾಗಿ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಜೊತೆಗೆ ವೈಯಕ್ತಿಕವಾಗಿ ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರು ಮೃತರಾದ ಪ್ರತಿಯೊಬ್ಬರ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಲು ಸಮ್ಮತಿಸಿದ್ದು, ಶೀಘ್ರವಾಗಿ ಕುಟುಂಬದವರಿಗೆ ತಲುಪಿಸುತ್ತೇನೆ ಎಂದು ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.