ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಸಂತೆಕಲ್ಲಹಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿ ತೆರಳುತ್ತಿದ್ದ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸ್ಥಳಕ್ಕೆ ಧಾವಿಸಿದ್ದು, ಆಂಬುಲೆನ್ಸ್ ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಚಿಂತಾಮಣಿ, ಹೊಸಕೋಟೆಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್ ಮತ್ತು ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ನಡುವೆ ಡಿಕ್ಕಿ ಆಗಿದೆ.
ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅದೃಷ್ಟವಶಾತ್ ಸಿಲಿಂಡರ್ ಸೋರಿಕೆಯಾಗಿಲ್ಲ ಮತ್ತು ಸ್ಫೋಟಗೊಂಡಿಲ್ಲ. ಸಿಲಿಂಡರ್ ಸ್ಫೋಟಗೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಮುನ್ನೆಚ್ಚರಿಕೆಯಿಂದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.