
ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಕುಳಿತಿದ್ದ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಕೊಪ್ಪಳ ಮೂಲದ ಜೇಮ್ಸ್(23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 23 ವರ್ಷದ ಚೈತ್ರಾ ಅವರನ್ನು ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಿನ ಮಂದಾರಗಿರಿಯಿಂದ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ನೆಲಮಂಗಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.