
ಉಡುಪಿ: ಮಹಿಳೆಗೆ ಚುಡಾಯಿಸಿದ ಆರೋಪದಲ್ಲಿ ಬ್ರಹ್ಮವಾರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಕೇರಳ ಮೂಲದ ಕಾರ್ಮಿಕ ಬಿಜು ಮೋಹನ್(42) ಮೃತಪಟ್ಟ ವ್ಯಕ್ತಿ. ಅಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕೇರಳ ಕೊಲ್ಲಂ ಮೂಲದ ಬಿಜು ಮೋಹನ್ ಮೂರು ದಿನಗಳ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದ. ಸೂರಬೆಟ್ಟು ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ನವೆಂಬರ್ 9ರಂದು ರಾತ್ರಿ ಸಮೀಪದ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಆತನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಮದ್ಯಪಾನ ಮಾಡಿದ್ದರಿಂದ ಬಿಜು ಮೋಹನ್ ನನ್ನು ಸೆಲ್ ನಲ್ಲಿ ಇರಿಸಲಾಗಿತ್ತು. ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ಬಾತ್ರೂಮ್ ನಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪರೀಕ್ಷಿಸಲಾಗಿದ್ದು, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಎಸ್.ಪಿ. ಡಾ. ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.