ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಸೇರಿದ್ದ 26ರ ಹರೆಯದ ಯುವಕನೊಬ್ಬ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಖಟ್ಕರಿ ಗ್ರಾಮದ ನಿವಾಸಿಯಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 23 ರಂದು ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಬೆದರಿಕೆ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ. ನಂತರ ಕಳೆದ ವಾರವಷ್ಟೇ ಜೈಲಿನಿಂದ ಹೊರಬಂದಿದ್ದ.
ಕಳೆದ ಶುಕ್ರವಾರ ಬಾಲಕಿ ಮನೆಗೆಲಸಕ್ಕೆ ಹೋಗುತ್ತಿದ್ದಾಗ ಈತ ಆಕೆಯನ್ನು ಅಪಹರಿಸಿದ್ದ. ನಂತರ ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿದೆ.
ಬಾಲಕಿಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಮರುದಿನ ಆರೋಪಿಯನ್ನು ಬಂಧಿಸಲಾಗಿದ್ದು, ಕೋಳ ತೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.