ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ‘ಬಾ ನಲ್ಲೆ ಮಧು ಚಂದ್ರಕೆ’ ಖ್ಯಾತಿಯ ನಟ ಕೆ.ಶಿವರಾಮ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಹೆಚ್.ಸಿ.ಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಕೆ.ಶಿವರಾಮ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಶಿವರಾಮ್ ಅವರ ಅಳಿಯ ಭರತ್ ನೀಡಿದ ಮಾಹಿತಿ ಪ್ರಕಾರ ಕಳೆದ 20 ದಿನಗಳ ಹಿಂದೆ ಕೆ.ಶಿವರಾಮ್ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸದ್ಯ ಅವರಿಗೆ ಡಯಾಲಿಸಿಸ್ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
71 ವರ್ಷದ ಕೆ.ಶಿವರಾಮ್ ಗೆ ಇಂದು ಹೃದಯಾಘಾತ ಕೂಡ ಆಗಿದ್ದು, ಅವರ ಮೆದುಳು ನಿಷ್ಕ್ರಿಯವಾಗಿದೆ ಎನ್ನಲಾಗಿದೆ.
ಕನ್ನಡದಲ್ಲಿಯೇ ಐಎಎಸ್ ಬರೆದು ಅಧಿಕಾರಿಯಾಗಿದ್ದ ಕೆ.ಶಿವರಾಮ್, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧು ಚಂದ್ರಕೆ ಚಿತ್ರದ ಮೂಲಕ ಖ್ಯಾತಿ ಪಡೆದಿದ್ದಾರೆ. ವಸಂತಕಾವ್ಯ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ಓ ಪ್ರೇಮ ದೇವತೆ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 2007ರ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು. ಅಲ್ಲದೇ ರಾಜಕೀಯದಲ್ಲಿ ಆಸಕ್ತಿ ಹೊಂದಿದ್ದ ಕೆ.ಶಿವರಾಮ್ ಬಿಜೆಪಿಗೆ ಸೇರ್ಪಡೆಯಾಗಿದ್ದರು.