ಬೆಂಗಳೂರು : ಮಾರ್ಚ್ 03 ರಂದು ನಡೆಯಲಿರುವ 2024-25 ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
6ನೇ ತರಗತಿ ದಾಖಲಾತಿಗಾಗಿ ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆಯು ಮಾರ್ಚ್ 3 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.