ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾದಾಗಿನಿಂದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈಗ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಮತ್ತೊಂದು ಅನಿರೀಕ್ಷಿತ ಹೆಸರು ಈಗ ಮುಂಚೂಣಿಗೆ ಬಂದಿದೆ.
ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಬೆಂಬಲವೂ ಇದೆ ಎಂದು ಮೂಲಗಳು ಹೇಳಿವೆ. ಹೀಗಾಗಿ ಕಡೆ ಕ್ಷಣದಲ್ಲಿ ಇವರೇ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಈ ಮಧ್ಯೆ ಶಶಿ ತರೂರ್ ಹಾಗೂ ದಿಗ್ವಿಜಯ್ ಸಿಂಗ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದು, ಇಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದ ಬಳಿಕ ಕಾಂಗ್ರೆಸ್ ನಲ್ಲಿ ಹಲವು ಬದಲಾವಣೆಗಳಾಗಲಿವೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಕಾದು ನೋಡಬೇಕಿದೆ.