ಬೆಂಗಳೂರು: ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ.
ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿದ್ದ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರಿಗೆ ಕಲ್ಯಾಣ ಕರ್ನಾಟಕ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನ ವಂಚಿತ ಶಾಸಕರಾದ ಬಸವರಾಜ ರಾಯರೆಡ್ಡಿ, ಬಿ.ಆರ್. ಪಾಟೀಲ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ರಾಜ ವೆಂಕಟಪ್ಪ ನಾಯಕ, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್, ತುಕಾರಾಂ, ಗವಿಯಪ್ಪ, ಸಂಸದ ಸೈಯದ್ ನಾಸೀರ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಅರಳಿ, ತಿಪ್ಪಣ್ಣಪ್ಪ ಕಮಕನೂರು ಅವರನ್ನು ಕಲ್ಯಾಣ ಕರ್ನಾಟಕ ಮಂಡಳಿ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಒಂದು ವರ್ಷ ಮತ್ತು ಮುಂದಿನ ಆದೇಶದ ವರೆಗೆ ಅನ್ವಯವಾಗುವಂತೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗಿದೆ. ಈ ಬಾರಿ ಕಲಬುರಗಿಯಿಂದ ಮಾಜಿ ಸಿಎಂ ಧರಂಸಿಂಗ್ ಪುತ್ರ ಅಜಯ್ ಸಿಂಗ್ ಮಂತ್ರಿ ಆಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಬಸವರಾಜ ರಾಯರೆಡ್ಡಿ, ಬಿ.ಆರ್. ಪಾಟೀಲ್ ಅವರು ಕೂಡ ಸಚಿವರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು.