ಸರ್ಕಾರಿ ಭೂಮಿಯಲ್ಲಿ ಸಾಗುವಳಿ ರೈತರಿಗೆ ಸಿಹಿ ಸುದ್ದಿ: ಅಕ್ರಮ -ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ಅಕ್ರಮ -ಸಕ್ರಮ ಯೋಜನೆ ಅಡಿ  50, 53, 57 ನಮೂನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಮುಂದಿನ ಆರು ತಿಂಗಳೊಳಗೆ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಮುಂದಿನ ಆರು ತಿಂಗಳಲ್ಲಿ ಯಾವುದೇ ಅರ್ಜಿ ಬಾಕಿ ಉಳಿಸದಂತೆ ಸಂಪೂರ್ಣವಾಗಿ ವಿಲೇವಾರಿ ಮಾಡುವಂತೆ ತಿಳಿಸಿದ್ದಾರೆ.

ಅಕ್ರಮ -ಸಕ್ರಮ ಯೋಜನೆ ಅಡಿ ಸಾಗುವಳಿ ಚೀಟಿ ನೀಡುವಂತೆ ಸಾವಿರಾರು ರೈತರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳು ವಿಲೇವಾರಿಯಾಗದೆ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಎಲ್ಲಾ ಅರ್ಜಿಗಳನ್ನು ಮುಂದಿನ ಆರು ತಿಂಗಳೊಳಗೆ ಬಾಕಿ ಇಲ್ಲದಂತೆ ವಿಲೇವಾರಿ ಮಾಡಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು. ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರ ಅನುಕೂಲಕ್ಕೆ ತಕ್ಕಂತೆ ವರ್ತಿಸಬಾರದು. ಬಡವರಿಗೆ, ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದರು.

ಕೃಷಿಯೇತರ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಅಧಿಕಾರಿಗಳೇ ನೇರವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಬೇರೆ ಚಟುವಟಿಕೆ ನಡೆಯುತ್ತಿದ್ದಲ್ಲಿ ಬಗರ್ ಹುಕುಂ ತಂತ್ರಾಂಶದ ಮೂಲಕ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಆಪ್ ಸಹಾಯದಿಂದ ತ್ವರಿತಗತಿಯಲ್ಲಿ ಬಗರ್ ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ತಂತ್ರಾಂಶದ ಮೂಲಕ ಇ- ಸಾಗುವಳಿ ಚೀಟಿ ನೀಡಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read