ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ವಿರುದ್ದ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆ ವೇಳೆ ಸಿಎಂ ಸಿದ್ದರಾಮಯ್ಯ ಮತದಾರರಿಗೆ ಆಮಿಷವೊಡ್ಡಿ ಗೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ ಎಂದು ತಿಳಿದು ಬಂದಿದೆ.
ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಭಾರೀ ವೈರಲ್ ಆಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಅಸ್ತ್ರವನ್ನಾಗಿಸಿಕೊಂಡ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನಂಜನಗೂಡಿನಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದರು. 2023 ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು. ಮತದಾರರಿಗೆ ಕುಕ್ಕರ್, ಐರನ್ ವಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು ಎಂದು ಯತಿಂದ್ರ ಅವರು ಬಹಿರಂಗ ಹೇಳಿಕೆ ನೀಡಿದ್ದರು.