ಬೆಂಗಳೂರು : ಪೊಲೀಸ್ ಅಧಿಕಾರಿ ವಿರುದ್ಧ ಕಿರುಕುಳ ಆರೋಪ ಮಾಡಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾಕ್ಷಿಪಾಳ್ಯದ ಶ್ರೀನಿವಾಸನಗರದಲ್ಲಿ ನಡೆದಿದೆ.
ಮೃತರನ್ನು ಶ್ರೀನಿವಾಸನಗರದ ಮಹದೇವಯ್ಯ ಎಂದು ಗುರುತಿಸಲಾಗಿದೆ. ಸೈಟ್ ವಿಚಾರಕ್ಕೆ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಹದೇವಯ್ಯ ವಿರುದ್ಧ ಶಿವಶಂಕರ್ ಎಂಬುವವರು ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಜಾಮೀನು ಪಡೆದ ಮಹದೇವಯ್ಯ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ರಾಜಗೋಪಾಲನಗರ ಠಾಣೆ ಇನ್ಸ್ ಪೆಕ್ಟರ್ ಠಾಣೆಗೆ ಕರೆಸಿ ಟಾರ್ಚರ್ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಮಹದೇವಯ್ಯ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.