ಬೆಂಗಳೂರು: ಮಹಿಳೆಯೊಬ್ಬರಿಗೆ ಪೊಲೀಸ್ ಸಿಬ್ಬಂದಿ ಮೂಲಕ ಹಲ್ಲೆ ನಡೆಸಿದ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದು ಕೋರಿ ಅಲೋಕ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ. ಫಿರ್ಯಾದುದಾರರಾದ ಮಮತಾ ಸಿಂಗ್ ಸಲ್ಲಿಸಿದ್ದ ಖಾಸಗಿ ದೂರನ್ನು ಗಂಭೀರ ಅಪರಾಧ ಎಂದು ಪರಿಗಣಿಸಿ ವಿಚಾರಣಾ ನ್ಯಾಯಾಲಯ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿತ್ತು.
ಮಮತಾ ಸಿಂಗ್ 2022 ರಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ತನ್ನ ಪುತ್ರಿಗೆ ಸಂಬಂಧಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ನಂತರ ತಮ್ಮ ದೂರನ್ನು ಅಲೋಕ್ ಕುಮಾರ್ ಗಂಭೀರವಾಗಿ ಪರಿಗಣಿಸಿಲ್ಲ, ಬದಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳಾ ಪೊಲೀಸರಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಪರಿಗಣಿಸಿ ಕೋರ್ಟ್ ಅಲೋಕ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಿತ್ತು.
ಈ ಕ್ರಮವನ್ನು ಅಲೋಕ್ ಕುಮಾರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲೋಕ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಅಲೋಕ್ ಕುಮಾರ್ ವಿರುದ್ಧ ನಗರದ 39ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆಯನ್ನು ವಜಾಗೊಳಿಸಿದೆ. ಅಲೋಕ್ ಕುಮಾರ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದರು.