ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗುಡ್ ನ್ಯೂಸ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಇಂದು ಸಮಾಧಾನ ಮತ್ತು ತೃಪ್ತಿಕರವಾದ ಚರ್ಚೆಗಳು ನಡೆದಿವೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಉಪಚುನಾವಣೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಅಮಿತ್ ಶಾ ರಾಜ್ಯ ಪ್ರವಾಸದ ಬಗ್ಗೆಯೂ ಚರ್ಚಿಸಿದ್ದೇವೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಕಳುಹಿಸುವಂತೆ ಅವರು ತಿಳಿಸಿದ್ದಾರೆ. ಅವರಿಂದ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ಗ್ರಾಮ ಪಂಚಾಯತಿ ಚುನಾವಣೆ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ. ಸಮಾಧಾನಕರವಾದ ಚರ್ಚೆಗಳು ನಡೆದಿವೆ ಎಂದು ಸಿಎಂ ಹೇಳಿದ್ದಾರೆ.
ಅಮಿತ್ ಶಾ ನಿವಾಸದಿಂದ ಹೊರಬಂದಾಗ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡದೇ, ಸೀದಾ ಕರ್ನಾಟಕ ಭವನಕ್ಕೆ ತೆರಳಿದ್ದು, ಸಂಪುಟ ವಿಸ್ತರಣೆಗೆ ಗ್ರೀನ್ ಸಿಕ್ಕಿಲ್ಲ. ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗಿರಬಹುದೆಂದು ಹೇಳಲಾಗಿತ್ತು.
ಇದಾದ ನಂತರ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ನಾಯಕರೊಂದಿಗೆ ಒಂದು ಗಂಟೆ ಚರ್ಚಿಸಿದ್ದೇವೆ. ಶೀಘ್ರವೇ ಗುಡ್ ನ್ಯೂಸ್ ಸಿಗಲಿದೆ. ಉಪ ಚುನಾವಣೆ, ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ್ದೇವೆ. ನನಗಂತೂ ತೃಪ್ತಿಕರ, ಸಮಾಧಾನಕರವಾಗಿದೆ. ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ವರಿಷ್ಠರ ಸೂಚನೆ ಬಂದ ಕೂಡಲೇ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.