ಹೊಸಪೇಟೆ: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ ಮಾಡಿದ್ದಕ್ಕೆ ಸಚಿವ ಆನಂದ್ ಸಿಂಗ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ಬದಲಾವಣೆ ಮಾಡಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೊಸಪೇಟೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಚಿವ ಆನಂದ್ ಅಭಿಮಾನಿಗಳ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ. ವಿಜಯನಗರ ಮಾತ್ರವಲ್ಲ, ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ. ಪ್ರತಿಭಟನೆ ಕೈ ಬಿಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಆನಂದ್ ಸಿಂಗ್ ಅವರ ಬಳಿಯಿದ್ದ ಬಳ್ಳಾರಿ, ವಿಜಯನಗರ ಉಸ್ತುವಾರಿಯನ್ನು ಬದಲಾವಣೆ ಮಾಡಿ ಅವರಿಗೆ ಕೊಪ್ಪಳ ಜಿಲ್ಲೆ ಉಸ್ತುವಾರಿ ನೀಡಲಾಗಿದೆ. ಶಶಿಕಲಾ ಜೊಲ್ಲೆ ಅವರಿಗೆ ವಿಜಯನಗರ ಜಿಲ್ಲೆ ಉಸ್ತುವಾರಿ, ಬಿ. ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲೆ ಉಸ್ತುವಾರಿ ನೀಡಲಾಗಿದೆ. ಇದು ಆನಂದ್ ಸಿಂಗ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.