ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಫೆಬ್ರುವರಿ 26 ಕೊನೆಯ ದಿನವಾಗಿದೆ. ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಹಾಗೂ ಮೊಳಕಾಲ್ಮೂರು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಒಟ್ಟು 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆ ಹಾಗೂ 110 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜನವರಿ 27 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರುವರಿ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, www.anganwadirecruit.kar.nic.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:
ಆನ್ಲೈನ್ನಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕವಿರುವ ಎಸ್ಎಸ್ಎಲ್ಸಿ ಅಂಕಪಟ್ಟಿ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಮೀಸಲಾತಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಲಗತ್ತಿಸುವುದು, ವಿಧವೆಯಾದಲ್ಲಿ ಪತಿಯ ಮರಣ ಪ್ರಮಾಣ ಪತ್ರ ಸಲ್ಲಿಸುವುದು.
ಆನ್ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆ ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು, ಅಂಗನಾವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು, ಖಾಯಂ ಹುದ್ದೆಯಾಗಿರುವುದಿಲ್ಲ, ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದಲ್ಲಿ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-231626, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08194-235958, ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08195-250291, ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08193-263512, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08191-275250, ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ-08199-230212, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08198-229535ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.