ಬೆಂಗಳೂರು: ಅಂಗನವಾಡಿಗಳಿಗೆ ಆಹಾರ ಪೂರೈಕೆಗೆ ಏಕರೂಪ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ವೈ.ಎ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸದ್ಯ ಅಂಗನವಾಡಿಗಳಿಗೆ ಆಹಾರ ಪೂರೈಕೆ ವ್ಯವಸ್ಥೆ ವಿಕೇಂದ್ರೀಕರಣ ಆಗಿರುವುದರಿಂದ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಪ್ರಕರಣಗಳು ಹೆಚ್ಚಾಗಿದ್ದು, ಈ ವ್ಯವಸ್ಥೆಯನ್ನು ಸೆಂಟ್ರಲೈಸ್ ಮಾಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.
ಮೊಟ್ಟೆ ಸೇರಿದಂತೆ ಬಹಳಷ್ಟು ಆಹಾರ ಪೂರೈಕೆ ಕಳಪೆಯಾಗಿದ್ದು, ಈ ಬಗ್ಗೆ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುವ ಇಂತಹ ಕ್ರಮಗಳನ್ನು ಕಠಿಣ ರೀತಿಯಲ್ಲಿ ಹತ್ತಿಕ್ಕಲಾಗುತ್ತದೆ. ಪ್ರತಿ ಮಗುವಿಗೆ ಪ್ರತಿದಿನ 8 ರೂಪಾಯಿ ವೆಚ್ಚವಾಗುತ್ತಿದ್ದು, ಇದು ಮೂರು ವರ್ಷಗಳ ಹಿಂದೆ ನಿಗದಿ ಮಾಡಲಾಗಿದ್ದು, ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ತಿಳಿಸಿದ್ದಾರೆ.