ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಅನುಮೋದನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಜವರಾಯಿಗೌಡ ಅವರ ಪರವಾಗಿ ಬಿಜೆಪಿ ಸದಸ್ಯ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅಗತ್ಯವಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಕೆ ಮಾಡುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇಕಡ 20ರಷ್ಟು ಇರುತ್ತದೆ ಎಂದು ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಶೇಕಡ 30ರಷ್ಟು ಪಾಲು ನೀಡುತ್ತದೆ. ಕೇಂದ್ರದ ಅನುಮೋದನೆ ದೊರೆತ ಕೂಡಲೇ ರಾಜ್ಯದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.