ಬೆಂಗಳೂರು: ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಂಡು ಆದೇಶ ಹೊರಡಿಸಿದೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮೃತಪಟ್ಟ ಸಂದರ್ಭದಲ್ಲಿ ಅವರ ಮಗಳಿಗೆ ಮಾತ್ರವಲ್ಲದೆ, ಸೊಸೆಗೆ ಅದೇ ಅಂಗನವಾಡಿ ಕೇಂದ್ರಗಳಲ್ಲಿ ಅನುಕಂಪದ ಆಧಾರದ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಸೇವೆಯಲ್ಲಿರುವಾಗ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮರಣ ಹೊಂದಿದರೆ ಅವಿವಾಹಿತೆ, ವಿವಾಹಿತೆ, ವಿಚ್ಛೇದಿತ ಮಗಳು ಇಲ್ಲದಿದ್ದರೆ ಸೊಸೆಗೆ ಅಂಗನವಾಡಿ ಕೇಂದ್ರಗಳಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಕೋಳಿ ಮೊಟ್ಟೆ ಹಣವನ್ನು ಮುಂಗಡವಾಗಿ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಸೇವಾ ಜೇಷ್ಠತೆಯನ್ನು ಸಮಪ್ರಮಾಣದಲ್ಲಿ ನೀಡಲು ಶಿಫಾರಸು ಮಾಡಲು ಸರ್ಕಾರ ಒಪ್ಪಿದೆ. ಅಲ್ಲದೇ, ಸೋಮವಾರದ ಉಳಿದ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಬೇಡಿಕೆ ಈಡೇರಿಸುವುದಾಗಿ ಸರ್ಕಾರದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಹಿಂಪಡೆಯಲಾಗಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹೇಳಿದ್ದಾರೆ.