
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ 1488 ಅಂಗನವಾಡಿ ಕಾರ್ಯಕರ್ತೆಯರು, 2811 ಸಹಾಯಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಜುಲೈ 1 ರಿಂದ ಆರಂಭಿಸಿ ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಶಿಫಾರಸು ಮಾಡಿದೆ.
ಅಪೌಷ್ಟಿಕತೆ ನಿವಾರಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾದ ಪಿಐಎಲ್ ವಿಚಾರಣೆ ವೇಳೆಯಲ್ಲಿ ಹೈಕೋರ್ಟ್ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಪ್ರಾಧಿಕಾರದಿಂದ ಈ ಮಾಹಿತಿ ನೀಡಲಾಗಿದೆ.
ದೊಡ್ಡ ಸಂಖ್ಯೆಯ ಹುದ್ದೆಗಳು ಖಾಲಿ ಇರುವುದರಿಂದ ಅಪೌಷ್ಟಿಕತೆ ನಿವಾರಣೆ ಮತ್ತು ನಿರ್ವಹಣೆ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂದು ಪ್ರಾಧಿಕಾರ ತಿಳಿಸಿದೆ.
ಜುಲೈ 1 ರಂದು ಅರ್ಜಿ ಆಹ್ವಾನಿಸಿ, ಆಗಸ್ಟ್ 15 ರೊಳಗೆ ಅರ್ಜಿ ಪರಿಶೀಲನೆ ನಡೆಸಿ, ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಆಗಸ್ಟ್ 31 ಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಸೆಪ್ಟೆಂಬರ್ 15 ರಂದು ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿ ಆಕ್ಷೇಪಣೆ ಆಹ್ವಾನಿಸಬೇಕು. ಅಕ್ಟೋಬರ್ 10 ಕ್ಕೆ ಅಂತಿಮ ಪಟ್ಟಿ ಪ್ರಕಟಿಸಿ, ಅಕ್ಟೋಬರ್ 30 ಕ್ಕೆ ನೇಮಕಾತಿ ಆದೇಶ ನೀಡಬೇಕೆಂದು ಸಲಹೆ ನೀಡಲಾಗಿದೆ.