ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗನವಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.
2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.