
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ರಾತ್ರಿಯಿಡೀ ಕೊರೆಯುವ ಚಳಿಯಲ್ಲಿಯೇ ಅಂಗನವಾಡಿ ಕಾರ್ಯಕರ್ತೆಯರು ನಡುಗುತ್ತ ಮಲಗಿ ಹೋರಾಟ ಮುಂದುವರೆಸಿದ್ದಾರೆ.
ಹೋರಾಟದ ಸ್ಥಳದಲ್ಲಿ ಸರಿಯಾದ ನೀರು, ಶೌಚಾಲಯದ ವ್ಯವಸ್ಥೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಇದುವರೆಗೂ ನಮ್ಮ ಪ್ರತಿಭಟನೆಗೆ ಸಕಾರಾತ್ಮಕ ಸ್ಪಂದನೆ ನೀಡಿಲ್ಲ. ಮುಖ್ಯಮಂತ್ರಿಗಳ ಭೇಟಿಯ ವೇಳೆ ಮನವಿ ಕೊಡಿ, ಮಾಡೋಣ ಎಂದು ಮಾತ್ರ ಹೇಳಿದ್ದಾರೆ. ವೇತನ ಹೆಚ್ಚಳ ಮಾಡದಿದ್ದರೆ ನಾವು ಪ್ರತಿಭಟನೆಯನ್ನು ಕೈಬಿಡುವುದಿಲ್ಲ. ಕೂಡಲೇ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಬೇಕು ಎಂದು ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸಿ ಮತ್ತು ಡಿ ದರ್ಜೆಯ ನೌಕರರೆಂದು ಪರಿಗಣಿಸಬೇಕು. ವೇತನ ಹೆಚ್ಚಳ ಮಾಡಬೇಕು. ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ. ಹೋರಾಟನಿರತ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ನಲ್ಲಿಯೇ ಉಳಿದುಕೊಂಡಿದ್ದಾರೆ. ಕುಡಿಯುವ ನೀರು, ಶೌಚಾಲಯ ಸಮಸ್ಯೆ ಉಂಟಾಗಿದ್ದು, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಲಾಗಿದೆ.