
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡುವ ಮೂಲಕ ಸರ್ಕಾರ ಸಿಎಂ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದರು.
2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂಪಾಯಿ ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂಪಾಯಿ ಅನುದಾನ ಹೊರೆಯಾಗಿದೆ ಎಂದರು.
ಅಂಗನವಾಡಿ ಕಾರ್ಯಕರ್ತೆಯವರ ಗೌರವ ಧನವನ್ನು ಹೆಚ್ಚಳ ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರವೇ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆಯ 2 ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸಲಾಗಿತ್ತು. ಆದರೆ, ಕಳೆದ ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ಒಂದು ರೂಪಾಯಿ ಹೆಚ್ಚಿಸಿರಲಿಲ್ಲ ಎಂದು ಸದನಕ್ಕೆ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ನೀಡಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದ್ದು, ಇದರಲ್ಲಿ ನಮ್ಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ, ಈವರೆಗೂ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದೆ ಎಂದರು.