ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG, UKG) ತರಗತಿಗಳನ್ನು ಆರಂಭಿಸುವ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದ್ದಾರೆ.
ಇಡೀ ದೇಶದಲ್ಲೆ ಮೊದಲ ಬಾರಿಗೆ ರಾಜ್ಯದಲ್ಲಿ ಸಮಗ್ರ ಶಿಶು ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (LKG, UKG) ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಇನ್ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೆ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಲಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಗೊಳಿಸುವ ಮೊದಲ ಹಂತವಾಗಿ ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಂಡಿವೆ ಎಂದು ತಿಳಿಸಿದರು.