ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ಕೊಲೆಯಾದ ಅಂಜಲಿ ಅಂಬಿಗೇರ ಅವರ ಸಹೋದರಿ ಯಶೋದಾ ಅಂಬಿಗೇರ(16) ಶನಿವಾರ ತಮ್ಮ ನಿವಾಸದಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಸ್ಥಳೀಯರು ಮತ್ತು ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯಶೋದಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಕನ ಸಾವಿನಿಂದ ಆಘಾತಗೊಂಡಿರುವ ಯಶೋದಾ ಅಕ್ಕನ ಸಾವಿಗೆ ನ್ಯಾಯ ನೀಡಬೇಕು. ಆರೋಪಿಯನ್ನು ಶೂಟ್ ಔಟ್ ಮಾಡಬೇಕು ಎಂದು ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಒತ್ತಾಯಿಸಿದ್ದರು. ಪ್ರತಿಭಟನೆ ವೇಳೆ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳಿಸಲಾಗಿತ್ತು. ಮನೆಗೆ ಮರಳಿದ ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಡಿಗೇರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.