
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅವರ ನೆನಪಿನಾರ್ಥ ರಾಜ್ಯದ ಎಲ್ಲಾ ಪರಿಶಿಷ್ಟ ಪಂಗಡ ವಸತಿ ಶಾಲೆಗಳು ಮತ್ತು ರಾಯಚೂರು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ರಾಜನಹಳ್ಳಿ ವಾಲ್ಮೀಕಿ ಸಮುದಾಯ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ, ರಾಯಚೂರು ವಿವಿಗೆ ವಾಲ್ಮೀಕಿ ಹೆಸರಿಡಬೇಕು. ಹಾವನೂರು ಹೆಸರಲ್ಲಿ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ವಸತಿ ಶಾಲೆಗಳು ಮತ್ತು ರಾಯಚೂರು ವಿವಿಗೆ ವಾಲ್ಮೀಕಿ ಹೆಸರಿಡುವುದಾಗಿ ಘೋಷಣೆ ಮಾಡಿದ್ದಾರೆ. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ನೀತಿ ಸಂಹಿತೆ ಉಲ್ಲಂಘಿಸಿ ವಿವಿಗೆ ಹೆಸರು ಘೋಷಣೆ ಮಾಡಲಾಗಿದೆ ಎಂದು ಆರೋಪಿಸಿದೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದ್ದಾರೆ.