ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲೇ ನಂದಿನಿ ( Nandini Milk) ಹಾಲಿನ ದರ ಲೀ.ಗೆ 5 ರೂ ಹೆಚ್ಚಳವಾಗುವ ಸಾಧ್ಯತೆ ಇದೆ.
ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಜುಲೈ 6 ರಂದು ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಈಗಾಗಲೇ ಹಾಲಿನ ದರ ಹೆಚ್ಚಳ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರವನ್ನು ಲೀಟರ್ಗೆ 5 ರೂ. ಹೆಚ್ಚಿಸುವಂತೆ ಹಿಂದೆಯೇ ಬೇಡಿಕೆ ಇಟ್ಟಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ” ಎಂದರು.ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್ ಮೇಲೆ ತೀವ್ರ ಒತ್ತಡವಿದ್ದು, ಈ ಹಿನ್ನೆಲೆ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ.